ಪೊಲೀಸ್ ಇನ್‌ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದ್ದು, ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದಾರೆ.
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಸೋಮವಾರ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ತಿಮ್ಮೇಗೌಡ ಅವರು ಈ ಹಿಂದೆ ಕುಂಬಳಗೋಡಿನ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ತಮ್ಮ ತೋಟದ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಳ್ಳುವ ಸ್ವಭಾವದವರಲ್ಲ. ಯಾರೋ ಹೊಡೆದು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಲ್ಪ ಸಮಯ ಪೊಲೀಸರು ಹಾಗೂ ಕುಟುಂಬದವರ ನಡುವೆ ಮಾತಿನ ಚಕಮಕಿ ನಡೆದಿದೆ.
ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯ ಪ್ರವೇಶಿಸಿ, ಕುಟುಂಬಸ್ಥರ ಮನವೊಲಿಸಿ ಶವವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿದ್ದಾರೆ.