ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಅವರು ಡೆಂಗ್ಯೂ ಜ್ವರದಿಂದ ನಿಧನರಾಗಿದ್ದಾರೆ.
ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಜಿಂಗಿಯಾ ಓರಮ್ (58) ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ 10:50 ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜಿಂಗಿಯಾ ಓರಮ್ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಓರಮ್ ಅಂತ್ಯಕ್ರಿಯೆಯು ಸುಂದರ್ಗಢ್ ಜಿಲ್ಲೆಯ ಅವರ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನು ಕೇಂದ್ರ ಸಚಿವರು ಕೂಡ ಡೆಂಗ್ಯೂಗೆ ತುತ್ತಾಗಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಓರಮ್ ಅವರ ನಿಧನಕ್ಕೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸಂತಾಪವನ್ನು ಸೂಚಿಸಿದ್ದಾರೆ. ಜುಯಲ್ ಅವರ ಸುದೀರ್ಘ ರಾಜಕೀಯ ಪಯಣದಲ್ಲಿ ಜಿಂಗಿಯಾ ಓರಮ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.