ಕೋಲ್ಕತ್ತಾ: ಕಾಂಗ್ರೆಸ್ ಕಾರ್ಯಕರ್ತನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಹತ್ಯೆಗೈದಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪಾಯಿಗುರಿ ಜಿಲ್ಲೆಯಲ್ಲಿ ನಡೆದಿದೆ.
ಮೊಯ್ನಾಗುರಿಯ ಖರ್ಗಬಾರಿ-1 ಗ್ರಾಮ ಪಂಚಾಯತಿ ವ್ಯಾಪ್ತಿಯ ಹಥಾತ್ ಕಾಲನಿಯಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಾಣಿಕ್ ರಾಯ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಗುರುವಾರ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಗುಂಪೊಂದು ವೈಮನಸ್ಸಿನ ಕಾರಣಕ್ಕೆ ಮಾಣಿಕ್ ಅವರನ್ನು ಕಟ್ಟಿಹಾಕಿ ಗಂಭೀರವಾಗಿ ಹಲ್ಲೆ ನಡೆಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗಂಭೀರವಾಗಿ ಗಾಯಗೊಂಡಿದ್ದ ಮಾಣಿಕ್ ರಾಯ್ ಅನ್ನು ಮೊಯ್ನಾಗುರಿಯಿಂದ ಜಲ್ಪಾಯಿಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಮಾಣಿಕ್ ಗುರುವಾರ ಮೃತಪಟ್ಟಿದ್ದಾರೆ.