ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಬಿಜೆಪಿ ವತಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.
ಈ ಮೂಲಕ ಬಿಜೆಪಿ ಪಕ್ಷವು ಟಿಕೆಟ್ ನೀಡದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುನ್ಸೂಚನೆಯನ್ನು ಅವರು ಕೊಟ್ಟಿದ್ದು, ಅವರ ನಡೆ ಎನ್ ಡಿಎ ಮೈತ್ರಿ ಕೂಟಕ್ಕೆ ದೊಡ್ಡ ತಲೆನೋವಾಗುವ ಸಂಭವವಿದೆ.
ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ. ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಎಂದು ಗೊತ್ತಿದೆ ಎಂದು ಹೇಳಿದ್ದಾರೆ.
ಈಗಾಗಲೇ ನಮ ರಾಜ್ಯ ನಾಯಕರು ಕೂಡ ನನ್ನ ಸ್ಪರ್ಧೆಯ ಬಗ್ಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮುಂಗೋಪ ಇದೆ. ಆದರೆ ಅಂತಿಮವಾಗಿ ಅವರ ಜತೆ ವರಿಷ್ಠರು ಮಾತಾಡಿದ ಬಳಿಕ ನನ್ನ ಸ್ಪರ್ಧೆಗೆ ಅವರು ಒಪ್ಪಿಗೆ ಸೂಚಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.
ಕಳೆದ ಬಾರಿ ಮೈತ್ರಿ ಮಾಡಿಕೊಳ್ಳುವಂತೆ ಹೇಳಿದವನೇ ನಾನು. ಬಿಜೆಪಿ ಮೈತ್ರಿ ಮಾಡಿಕೊಳ್ಳದಿದ್ದರೆ ನಮ್ಮ ಭಾಗದಲ್ಲಿ ಜೆಡಿಎಸ್ ಕಥೆ ಏನಾಗುತ್ತಿತ್ತು? ಹೀಗಾಗಿ ಎರಡು ಪಕ್ಷಗಳ ಒಮ್ಮತದ ಅಭ್ಯರ್ಥಿ ನಾನೇ ಆಗುವ ವಿಶ್ವಾಸ ಇದೆ ಎಂದು ಯೋಗೇಶ್ವರ್ ಹೇಳಿದ್ದಾರೆ.