ಬಾಂಗ್ಲಾದೇಶದಲ್ಲಿ ವ್ಯಾಪಕವಾದ ಹಿಂಸಾಚಾರದ ಬೆನ್ನಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದಾರೆ. ಇದರ ಬೆನ್ನಲ್ಲಿ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್, ಜೈಲಿನಲ್ಲಿದ್ದ ವಿರೋಧ ಪಕ್ಷದ ನಾಯಕಿ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ.
ವಿರೋಧ ಪಕ್ಷದ ಸದಸ್ಯರೊಂದಿಗೆ ಚರ್ಚಿಸಿದ ನಂತರ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ ಪಿ) ಅಧ್ಯಕ್ಷರನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಲು ಅಧ್ಯಕ್ಷ ಶಹಾಬುದ್ದೀನ್ ಒಮ್ಮತದಿಂದ ನಿರ್ಧರಿಸಿದ್ದಾರೆ.
ಸಭೆಯಲ್ಲಿ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರು ಮತ್ತು ಬಿಎನ್ಪಿ ಮತ್ತು ಜಮಾತ್-ಎ-ಇಸ್ಲಾಮಿ ಸೇರಿದಂತೆ ವಿರೋಧ ಪಕ್ಷಗಳ ಉನ್ನತ ನಾಯಕರು ಭಾಗವಹಿಸಿದ್ದರು.
ಶೇಖ್ ಹಸೀನಾ ಅವರ ಪ್ರಬಲ ವಿರೋಧಿ ಎಂದು ಪರಿಗಣಿಸಲ್ಪಟ್ಟಿರುವ 78 ವರ್ಷದ ಖಲೀದಾ ಜಿಯಾ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿಯ ಮುಖ್ಯಸ್ಥರಾಗಿದ್ದಾರೆ.