ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಗುತ್ತಿಹಳ್ಳ ಬಳಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಸಂಪಿಗೆಹಳ್ಳ ನಿವಾಸಿಯಾಗಿರುವ ಮಂಜುನಾಥ್ ಗದ್ದೆಮನೆ(27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್ ಡೈರಿಗೆ ಹಾಲು ಹಾಕಿ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದ ಮಂಜುನಾಥ್ ಬೈಕಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಇಬ್ಬರೂ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಇಬ್ಬರು ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಅಪಘಾತದಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಮಂಜುನಾಥ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಮಂಜುನಾಥ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾನೆ.
ಸದ್ಯ ಮಂಜುನಾಥ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಘಟನಾ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.