ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ.
ವರದಿಗಳ ಪ್ರಕಾರ, ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಜಂಟಿಯಾಗಿ ರಾಜೀನಾಮೆ ಸಲ್ಲಿಸಿದ್ದು ಸಂಪೂರ್ಣ ಸಮಿತಿ ವಿಸರ್ಜಿಸಲಾಗಿದೆ.
ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಬಗ್ಗೆ ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ಸ್ಫೋಟಕ ವರದಿಯ ಬೆನ್ನಲ್ಲೇ ಹಲವು ನಾಯಕ ನಟರ ವಿರುದ್ಧ ಕಲಾವಿದೆಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆ ನಂತರ ಈ ಬೆಳವಣಿಗೆ ನಡೆದಿದೆ.
ಇನ್ನು ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚುತ್ತಿದೆ.
ಈ ನಡುವೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ಕರೆದಿದ್ದು, ನಟಿಯರು ಎದುರಿಸುತ್ತಿರುವ ದೌರ್ಜನ್ಯದ ತನಿಖೆಗೆ ಏಳು ಸದಸ್ಯರ ವಿಶೇಷ ತಂಡವನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ.
ನಟ, ರಾಜಕಾರಣಿ ಮುಖೇಶ್, ನಿರ್ದೇಶಕ ರಂಜಿತ್ ಮತ್ತು ನಟ ಸಿದ್ದಿಕ್ ಸೇರಿದಂತೆ ಹಲವಾರು ಮಂದಿಯ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.