ಕೇಂದ್ರ ಬಜೆಟ್‌ನಲ್ಲಿ ತಮ್ಮ ರಾಜ್ಯಗಳನ್ನು ಕಡೆಗಣಿಸಿರುವುದನ್ನು ವಿರೋಧಿಸಿ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆಯಲಿದೆ. ಸಭೆಯನ್ನು ಕರ್ನಾಟಕದ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.
ನೀತಿ ಆಯೋಗದ ಸಭೆಗೆ ಹಾಜರಾಗುವುದು ಅರ್ಥಹೀನ, ಕನ್ನಡಿಗರ ಕಾಳಜಿಯನ್ನು ಮರೆಯಲಾಗಿದೆ. ಕರ್ನಾಟಕದ ಅಗತ್ಯಗಳ ಬಗ್ಗೆ ಚರ್ಚಿಸಲು ನವದೆಹಲಿಯಲ್ಲಿ ಸರ್ವಪಕ್ಷದ ಸಂಸದರ ಸಭೆಗೆ ಕರೆ ನೀಡುವಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡಿದರೂ, ಕೇಂದ್ರ ಬಜೆಟ್ ನಮ್ಮ ರಾಜ್ಯದ ಬೇಡಿಕೆಗಳನ್ನು ನಿರ್ಲಕ್ಷಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ 5 ಮಂದಿ ಸಂಸದರು ಕೇಂದ್ರದಲ್ಲಿ ಸಚಿವರಾಗಿದ್ದರೂ ನಾಡಿನ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದ ಕನ್ನಡಿಗರು ಈ ಬಾರಿ ಕೇಂದ್ರ ಬಜೆಟ್ ನಿಂದು ಭ್ರಮನಿರಸನಗೊಂಡಿದ್ದಾರೆ. ಈ ಬಾರಿ ಆಂಧ್ರ ಪ್ರದೇಶ ಹಾಗೂ ಬಿಹಾರ ಭರಪೂರ ಅನುದಾನ ಬಾಚಿದರೆ, ಭಾರತದ ಉಳಿದ ರಾಜ್ಯಗಳಿಗೆ ದೊಡ್ಡ ಚೊಂಬು ಕೊಡಲಾಗಿದೆ. ಈ ಅನ್ಯಾಯವನ್ನು ಸಹಿಸಲಾಗದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವ ತಮ್ಮ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದರು.