ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಅಸ್ವಸ್ಥರಾಗಿ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಮೃತರನ್ನು ಭೀಮಣ್ಣ(60), ಈರಮ್ಮ (54), ಮಲ್ಲೇಶ್ (19) ಹಾಗೂ ಪಾರ್ವತಿ(17)ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಲ್ಲಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದೆ.
ಬುಧವಾರ ರಾತ್ರಿ ಇಡೀ ಕುಟುಂಬ ಮಟನ್ ಕೊಂಡು ತಂದು ಅಡುಗೆ ಮಾಡಿ ಜೊತೆಯಾಗಿ ಊಟ ಮಾಡಿತ್ತು. ಆ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ. ಮಟನ್ ಅಡುಗೆಯಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.