ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.
ಸೂರಜ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.
ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿಯಾಗಬಾರದು. ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು. ಅರ್ಜಿದಾರರು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಸೇರಿದಂತೆ ವಿವಿಧ ಷರತ್ತುಗಳನ್ನು ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.