ಸಹಪಾಠಿಯಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉದಯಪುರ ಜಿಲ್ಲೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು ದೇವರಾಜ್ (15) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 16ರಂದು ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ಸಮಯದಲ್ಲಿ ಬಾಲಕರಿಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಸಹಪಾಠಿ ವಿದ್ಯಾರ್ಥಿ ದೇವರಾಜ್ ಗೆ ಚಾಕುವಿನಿಂದ ತೊಡೆ ಭಾಗಕ್ಕೆ ಇರಿದಿದ್ದ. ಗಂಭಿರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್, ಸೋಮವಾರ ಚಿಕಿತ್ಸೆ ವೇಳೆ ಬಾಲಕ ಮೃತಪಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಆಸ್ಪತ್ರೆಯ ಹೊರಗೆ ಭಾರೀ ಪೊಲೀಸ್ ನಿಯೋಜನೆ ಹಾಗೂ ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.