ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಎರಡು ಗ್ರಾಮಗಳು ಸಂಪೂರ್ಣವಾಗಿ ನಾಶವಾಗಿದೆ. ಆದರೆ ಕೇಂದ್ರ ಸರಕಾರ ಈ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನಿರಾಕರಿಸಿದೆ.
ಭೂ ಕುಸಿತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಕೇರಳ ಸರಕಾರ ಕೇಂದ್ರಕ್ಕೆ ಆಗ್ರಹಿಸಿತ್ತು. ಕೇಂದ್ರ ನಿರಾಕರಿಸಿದ ಹಿನ್ನೆಲೆಯಲ್ಲಿ ಕೇರಳ ಸರಕಾರವು ಈ ದುರಂತವನ್ನು ‘ರಾಜ್ಯ ವಿಪತ್ತು’ ಎಂದು ಘೋಷಿಸಲು ಮುಂದಾಗಿದೆ.
ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ‘ವಿಪತ್ತು ಪೀಡಿತ’ ಪ್ರದೇಶ ಎಂದು ಘೋಷಿಸಿ ಈಗಾಗಲೇ ರಾಜ್ಯ ಸರಕಾರ ಆದೇಶ ಕೂಡ ಹೊರಡಿಸಿದೆ.
ಈ ಕುರಿತು ಮಾತನಾಡಿದ ಕೇರಳದ ಕಂದಾಯ ಸಚಿವ ಕೆ.ರಾಜನ್, ನಾವು ಈ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಒತ್ತಾಯಿಸಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ ಅವರು ಕಾನೂನಾತ್ಮಕ ಸಮಸ್ಯೆಗಳಿವೆ ಎಂದು ಹೇಳಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನಿರಾಕರಿಸಿದ್ದಾರೆ. ಆದ್ದರಿಂದ ನಾವು ಈ ದುರಂತವನ್ನು ‘ರಾಜ್ಯ ವಿಪತ್ತು’ ಎಂದು ಘೋಷಿಸಲಿದ್ದೇವೆ ಎಂದು ಹೇಳಿದ್ದಾರೆ.
ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಮೃತರ ಸಂಖ್ಯೆ 350ಕ್ಕೆ ಸಮೀಪಿಸಿದೆ. ಇನ್ನು ಕೂಡ ನೂರಾರು ಮಂದಿ ನಾಪತ್ತೆಯಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.